ಮಂಗಳೂರು, {ಮಾ 27} ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದೆ.
ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಗುವನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಮಗುವಿನಲ್ಲಿ ಶಂಕಿತ ಕೊರೊನಾ ಸೋಂಕು ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಮಗುವಿನ ಗಂಟಲು ದ್ರವವನ್ನು ಬುಧವಾರ ಪರೀಕ್ಷೆ ರವಾನಿಸಲಾಗಿತ್ತು. ಗುರುವಾರ ಬಂದ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು.
ವಿಶೇಷ ಎಂದರೆ ಈ ಮಗುವಿನ ಕುಟುಂಬ ಕೊರೊನಾ ಪೀಡಿತ ದೇಶಗಳಿಗೆ ಪ್ರಯಾಣ ಬೆಳೆಸಿರಲಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ ಮಗು ಸಮೇತ ಈ ಕುಟುಂಬ ಕೇರಳದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಹೋಗಿ ಬಂದಿರುವ ಮಾಹಿತಿ ಇದ್ದು ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಮಗುವಿನಲ್ಲಿ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ಸಂಪರ್ಕದಲ್ಲಿ ಇದ್ದ ಆರು ಮಂದಿಯನ್ನು ಹೋಂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.ಅಲ್ಲದೆ ಹತ್ತಿರದ ಸಂಬಂಧಿಗಳನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ.
ಇನ್ನು ಮಗುವಿನ ಸ್ವ್ಕಾಬ್ ಮತ್ತು ರಕ್ತದ ಮಾದರಿ ಮತ್ತೆ ಮರು ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಜಿಪನಾಡು ಗ್ರಾಮವನ್ನು ಕ್ವಾರಂಟೈನ್ ಮಾಡಲಾಗಿದೆ. ಯಾವುದೇ ವ್ಯಕ್ತಿಗಳು ಸಜಿಪನಡು ಗ್ರಾಮದಿಂದ ಹೊರಗೆ ಹಾಗೂ ಒಳಗೆ ಪ್ರವೇಶಿಸುವಂತಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ..