ಬೆಂಗಳೂರು(ಜುಲೈ.30) ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಆಚರಿಸುತ್ತಿದ್ದಂತ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ತಕ್ಷಣದಿಂದಲೇ ರಾಜ್ಯ ಬಿಜೆಪಿ ಸರ್ಕಾರ ರದ್ದುಗೊಳಿಸಿದೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಟಿಪ್ಪು ಸುಲ್ತಾನ್ ಜಯಂತಿಯನ್ನು ರದ್ದುಗೊಳಿಸಲು ತೀರ್ಮಾನಿಸಿತ್ತು. ಇದಕ್ಕೆ ಸಂಬಂಧಪಟ್ಟಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇಂದು ಅಧಿಕೃತ ಆದೇಶವನ್ನು ಹೊರಡಿಸಿದೆ.

ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿಯವರಿಗೆ ಪತ್ರವನ್ನು ಬರೆದಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿ ವರ್ಷ ಸರ್ಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿಯನ್ನು ಆಚರಿಸುತ್ತಿದ್ದು, ಈ ಜಯಂತಿ ವಿರುದ್ಧ ಕೊಡಗು ಜಿಲ್ಲೆಯಲ್ಲಿ ತೀವ್ರ ಪ್ರತಿಭಟನೆಗಳು ನಡೆದಿವೆ, ಜಿಲ್ಲೆಯ ಜನರು ಈ ಕಾರ್ಯಕ್ರಮದ ವಿರುದ್ದ ಪ್ರತಿಭಟಿಸುತ್ತಿದ್ದಾರೆ

ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುತ್ತಿರುವುದರಿಂದ ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗಿದೆ. ಜಿಲ್ಲೆಯಲ್ಲಿ ಅಶಾಂತಿ ವಾತಾವರಣ ಇದ್ದು, ಜನರ ನಡುವಿನ ಸಾಮರಸ್ಯ ಹದಗೆಟ್ಟಿದೆ ಹೀಗಾಗಿ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಪಡಿಸಲು ಆದೇಶ ನೀಡಬೇಕೆಂದು ಕೋರಿದ್ದರು. ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.