ಚಾಮರಾಜನಗರ(ಜೂ:12): ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ವೀರನ ಪುರದಲ್ಲಿ ದೇವರ ವಿಗ್ರಹ ಧ್ವಂಸಗೊಳಿಸಿದ್ದಾನೆ ಎಂಬ ಆರೋಪದಲ್ಲಿ 38 ರ ಹರೆಯದ ದಲಿತ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿಸಿದ ಕೃತ್ಯವನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದು, ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದಾರೆ.

ಈ ಘಟನೆ ಜೂನ್‌ 2 ರಂದು ತಡರಾತ್ರಿ ನಡೆದಿದ್ದು, ಸೋಮವಾರ ಸಾಮಾಜಿಕ ತಾಣಗಳಲ್ಲಿ ಅಮಾನವೀಯ ಹಲ್ಲೆ ನಡೆಸಿದ ದೃಶ್ಯಗಳು ವೈರಲ್‌ ಆಗಿದ್ದವು. ಆ ಬಳಿಕ ಹಲ್ಲೆಗೊಳಗಾದ ವ್ಯಕ್ತಿ ಸಂಬಂದಿಯೊಬ್ಬರು ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಖಂಡನೆ ವ್ಯಕ್ತಪಡಿಸಿದ್ದಾರೆ .’ಗುಂಡ್ಲಪೇಟೆ ತಾಲ್ಲೂಕಿನಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆತ್ತಲೆ ಮೆರವಣಿಗೆ ಮಾಡಿರುವುದು ಅತ್ಯಂತ ಅಮಾನವೀಯ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ತಿಳಿಸಿದ್ದೇನೆ. ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರ. ಇಂಥ ಕೃತ್ಯಗಳನ್ನು ಒಕ್ಕೊರಲಿನಿಂದ ವಿರೋಧಿಸಬೇಕು.’ ಎಂದು ಟ್ವೀಟ್‌ ಮಾಡಿದ್ದಾರೆ.