ಲಕ್ನೋ(ಫೆ.19): ಪ್ರಸ್ತುತ ಭಾರತಕ್ಕೆ ಬುಲೆಟ್ ಟ್ರೈನ್ ಬೇಕಿಲ್ಲ, ಸೈನಿಕರಿಗೆ ಬುಲೆಟ್ ಪ್ರೂಫ್ ಜಾಕೇಟ್‍ನ ಅವಶ್ಯಕತೆ ಇದೆ ಎಂದು ಉತ್ತರ ಪ್ರದೇಶ ಮಾಜಿ ಸಿಎಂ ಹಾಗೂ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಪುಲ್ವಾಮಾದಲ್ಲಿನ ಉಗ್ರರ ದಾಳಿಯ ಕುರಿತು ಪ್ರತಿಕ್ರಿಯೆ ನೀಡಿರುವ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುಲ್ವಾಮಾ ದುರಂತಕ್ಕೆ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ. ಹುತಾತ್ಮರಾದ ಯೋಧರನ್ನು ಮತ್ತೆ ಕರೆತರಲು ಸಾಧ್ಯವಿಲ್ಲ ಎಂದು ಕೇಂದ್ರದ ನಡೆಯನ್ನು ಟೀಕಿಸಿದ್ದಾರೆ.

ರಾಜಕೀಯ ಪಕ್ಷಗಳು ದೇಶಕ್ಕಾಗಿ ಒಂದಾಗಬೇಕು. ಕೇಂದ್ರ ಸರ್ಕಾರ ಸಹ ಯೋಧರ ರಕ್ಷಣೆಯ ನಿಟ್ಟಿನಲ್ಲಿ ಹೆಚ್ಚು ಚಿಂತಿಸಬೇಕಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಪುಲ್ವಾಮ ದಾಳಿಯಲ್ಲಿ 40 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಹೊರಟಿರುವ ಭಾರತ ಸೇನೆ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಅಬ್ದುಲ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.