ಬೆಂಗಳೂರು(ನ.28): ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇಂದು ಸುಮಾರು 20 ನಿಮಿಷಗಳ ಕಾಲ ರಹಸ್ಯ ಮಾತುಕತೆ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಇಂದು ಬಿಜೆಪಿಯ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಶಾಸಕ ಹರತಾಳ ಹಾಲಪ್ಪ, ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ, ಅರಣ್ಯ ಸಚಿವ ಆರ್.ಶಂಕರ್ ಅವರು ಕ್ರೆಜೆಂಟ್ ರಸ್ತೆಯಲ್ಲಿರುವ ಡಿ.ಕೆ.ಶಿವಕುಮಾರ್ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ.

ಇಂದು ನಡೆದ ಸಭೆಯಲ್ಲಿ ಸುಮಾರು 8 ನೀರಾವರಿ ಯೋಜನೆಗಳ ಬಗ್ಗೆ ಯಡಿಯೂರಪ್ಪ ಪ್ರಸ್ತಾಪಿಸಿದ್ದು, ಅವುಗಳಿಗೆ ಚಾಲನೆ ನೀಡುವಂತೆ ಮನವಿ ಮಾಡಿದ್ದಾರೆ.

ಇದಾದ ಬಳಿಕ ಯಡಿಯೂರಪ್ಪ ಮತ್ತು ಡಿ.ಕೆ.ಶಿವಕುಮಾರ್ ಸುಮಾರು 20 ನಿಮಿಷಗಳ ಕಾಲ ರಹಸ್ಯ ಮಾತುಕತೆ ನಡೆಸಿದ್ದಾರೆ. ಸಭೆಯ ನಂತರ ಇಬ್ಬರೂ ನಾಯಕರು ಜಂಟಿಯಾಗಿ ಮಾಧ್ಯಮಗಳ ಮುಂದೆ ಹಾಜರಾಗಿ ಅಭಿವೃದ್ಧಿ ವಿಷಯದ ಬಗ್ಗೆ ಅಷ್ಟೇ ಚರ್ಚೆ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ಮೂಲಗಳ ಪ್ರಕಾರ ಬಿಜೆಪಿ ನಾಯಕರು ಮತ್ತು ಡಿ.ಕೆ.ಶಿವಕುಮಾರ್ ಅವರ ಭೇಟಿ ರಾಜಕೀಯ ವಿಚಾರದ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಒಟ್ಟಾರೆ ಸುದೀರ್ಘ ಕಾಲದ ನಂತರ ಯಡಿಯೂರಪ್ಪ ಅವರು ಡಿ.ಕೆ.ಶಿವಕುಮಾರ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದೆ.