ಬೆಂಗಳೂರು(ಜೂ:20): ವೈದ್ಯರ ಮೇಲಿನ ಹಲ್ಲೆ ತಡೆಗೆ ಇರುವ ಕಾನೂನನ್ನು ಕಠಿಣಗೊಳಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಎಚ್.ಡಿ.‌ಕುಮಾರಸ್ವಾಮಿ ತಿಳಿಸಿದರು.

ನಗರದ ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ನಿರ್ಮಿಸಿರುವ ಐದು ಸುಸಜ್ಜಿತ ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು ವೈದ್ಯರ ರಕ್ಷಣೆಗೆ 2006ರಲ್ಲಿ ನಾನೇ ಕಾನೂನು ಜಾರಿಗೊಳಿಸಿದ್ದೆ. ಅದರಂತೆ ವ್ಯದ್ಯರ ಮೇಲೆ ಹಲ್ಲೆ ಮಾಡಿದವರಿಗೆ ಜಾಮೀನುರಹಿತ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಲಾಗುತ್ತದೆ. ಇದನ್ನು ಇನ್ನಷ್ಟು ಬಲಿಷ್ಠಗೊಳಿಸಲು ಸರ್ಕಾರ ಸಿದ್ಧ. ಅಗತ್ಯಬಿದ್ದರೆ ಮಾರ್ಪಾಡು ಕೂಡ ಮಾಡಲಾಗುವುದು ಎಂದರು.

ಅಷ್ಟೇ ಅಲ್ಲದೇ, ಈಗಿರುವ ಕಾನೂನಿಗೆ ಸಂಬಂಧಿಸಿದ ಸುತ್ತೋಲೆಯನ್ನು ಕೂಡ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆ ಐದು ಶಸ್ತ್ರಚಿಕಿತ್ಸಾ ಕೊಠಡಿಗಳಿಗೆ ಸಂಬಂದಿಸಿದ ಪತ್ರಗಳನ್ನು ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ಹಸ್ತಾಂತರಿಸಿದರು.