ರಾಯಚೂರು(ಜೂನ್.26) ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ಜನತಾ ದರ್ಶನ, ಗ್ರಾಮ ವಾಸ್ತವ್ಯ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ಸಿಎಂ ಕುಮಾರಸ್ವಾಮಿ ಅವರು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಲಧಾರೆ ಯೋಜನೆಯ ಮೂಲಕ ಸಮಗ್ರ ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಪ್ರಸ್ತಾವನೆ ಸರಕಾರದ ಮುಂದಿದ್ದು ಅದಕ್ಕೆ ಶೀಘ್ರ ಅನುಮೋದನೆ ನೀಡುವುದರ ಮೂಲಕ ಇಡೀ ಜಿಲ್ಲೆಗೆ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬರಗಾಲಕ್ಕೆ ಸಂಬಂಧಿಸಿದಂತೆ ಹಾಗೂ ಅದರ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಿದ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಿ, ಎಲ್ಲಿಯೂ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವರಾದ ಸಾ.ರಾ. ಮಹೇಶ್, ಶಿವಶಂಕರ ರೆಡ್ಡಿ, ವೆಂಕಟರಾವ ನಾಡಗೌಡ, ಶಾಸಕ ರಾಜಾವೆಂಕಟಪ್ಪ ನಾಯಕ್ ಉಪಸ್ಥಿತರಿದ್ದರು.