ನವದೆಹಲಿ(ಜೂನ್11): ರಾಜ್ಯದ ಮೈತ್ರಿ ಸರ್ಕಾರದಲ್ಲಿ ಮತ್ತೇ ಬಿರುಕು ಉಂಟಾಗಿದೆಯಾ ಎಂಬ ಅನುಮಾನ ಮೂಡಿದೆ ಅಷ್ಟಕ್ಕೂ ಈ ಅನುಮಾನ ಬರಲು ಕಾರಣ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜೆಡಿಎಸ್ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ದೇವೇಗೌಡ ಅವರು ರಾಹುಲ್ ಗಾಂಧಿ ಆವರನ್ನು ಭೇಟಿ ಮಾಡಿ ರಾಜ್ಯ ಕಾಂಗ್ರೆಸ್ ನ ಕೆಲವು ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದ ಕಳಪೆ ಪ್ರದರ್ಶನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ದೇವೇಗೌಡರು ರಾಹುಲ್ ಗಾಂಧಿ ಅವರಿಗೆ ದೂರು ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಸಚಿವ ಸಂಪುಟದ ನಿರ್ಧಾರಗಳ ಬಗ್ಗೆ ಕೆಲವು ಕಾಂಗ್ರೆಸ್ ನ ಹಿರಿಯ ನಾಯಕರೇ ಟೀಕೆ ಮಾಡುತ್ತಿರುವ ಬಗ್ಗೆಯೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸೋನಿಯಾ ಹಾಗೂ ರಾಹುಲ್ ಭೇಟಿ ಮಾಡಿರುವ ಅವರು ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಸಹ ಪ್ರಮುಖವಾಗಿ ಚರ್ಚೆ ನಡೆಸಿದ್ದು, ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ಮತ್ತು ರೋಷನ್ ಬೇಗ್ ಸಂಪುಟ ವಿಸ್ತರಣೆಯ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನದ ಹೇಳಿಕೆ ನೀಡಿದ್ದರ ಬಗ್ಗೆ ಸಹ ರಾಹುಲ್ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ