ಬೆಂಗಳೂರು(ಜೂ:10): ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಕವಿ ಗಿರೀಶ್ ಕಾರ್ನಾಡ್ ಅವರು ವಿಧಿವಶರಾಗಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯಲ್ಲಿರು ಸ್ವಗೃಹದಲ್ಲಿ ಅವರು ನಿಧರಾಗಿದ್ದಾರೆ ಎನ್ನಲಾಗಿದೆ. ಗಿರೀಶ ಕಾರ್ನಾಡ್‌ರು 1938 ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದ್ದರು.

ಗಿರೀಶರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ಪೂರ್ಣಗೊಳಿಸಿದರು . ಆ ಬಳಿಕ ರ್ಹೊಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್‌ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದಾರೆ.ತಮ್ಮ ಓದು, ಚರ್ಚೆಯನ್ನು ದೇಶ ವಿದೇಶದಲ್ಲೂ ಹರಡಿ ಭಾರತದ ಕೀರ್ತಿಯನ್ನು ಎತ್ತಿಹಿಡಿದರು. ಬಹುಭಾಷಾ ಪಂಡಿತರೆಂಬ ಹಿರಿಮೆಗೆ ಪಾತ್ರರಾಗಿ, ಚಿಕಾಗೊ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಕಾರ್ನಾಡ್ ಸೇವೆ ಸಲ್ಲಿಸಿದರು. ವಿದೇಶದಲ್ಲಿದ್ದಾಗಲೇ ಕನ್ನಡ ನಾಟಕಗಳನ್ನು ಬರೆದು ಇಲ್ಲಿಗೆ ಬಂದು ಹೊಸ ನಾಟಕಗಳ ಓದು, ಪ್ರದರ್ಶನಕ್ಕೆ ದಾರಿ ಮಾಡಿಕೊಂಡರು.

ಕಾರ್ನಾಡರಿಗೆ ಹಲವಾರು ಹುದ್ದೆಗಳು ಹಾಗೂ ಪ್ರಶಸ್ತಿಗಳು ಲಭಿಸಿವೆ.ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ,ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ (1974), ಪದ್ಮಭೂಷಣ ಪ್ರಶಸ್ತಿ (1992), ಜ್ಞಾನಪೀಠ ಪ್ರಶಸ್ತಿ (1998), ಕಾಳಿದಾಸ ಸಮ್ಮಾನ್ (1998) ಇನ್ನು ಹಲವಾರು ಪ್ರಶಸ್ತಿಗಳು ಲಭಿಸಿವೆ.