ಬೆಂಗಳೂರು(ಜುಲೈ.27) ರಾಜ್ಯದಲ್ಲಿ ಮೈತ್ರಿ ಸರ್ಕಾರ ತನ್ನ ವಿಶ್ವಾಸ ಮತಯಾಚನೆಯಲ್ಲಿ ಸೋಲು ಕಂಡಿದ್ದು, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಈ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾದ ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸಬೇಕು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ರೆಬಲ್ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಹೆಚ್ ಡಿ. ದೇವೇಗೌಡರು, ಇಂದಿನಿಂದಲೇ ಪಕ್ಷ ಸಂಘಟನೆ ಮಾಡಬೇಕು. ಕುಮಾರಸ್ವಾಮಿ ಸರ್ಕಾರದ ಸಾಲಮನ್ನಾ, ಬಡವರ ಬಂಧು, ಋಣಮುಕ್ತ ಕಾಯ್ದೆ ಬಗ್ಗೆ ಮನೆ-ಮನೆಗೆ ಪ್ರಚಾರ ಮಾಡಿ ಎಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದರು.

ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅತೃಪ್ತ ಶಾಸಕರಿಗೆ ನೆಮ್ಮದಿಯಿಂದ ಇರಲು ಬಿಡುವುದಿಲ್ಲ. ಯಾರೇ ಏನೇ ಮಾಡಿದರೂ ಜೆಡಿಎಸ್ ಪಕ್ಷವನ್ನು ಕಟ್ಟಿಹಾಕಲು ಆಗುವುದಿಲ್ಲ. ಸಿಎಂ ಆಗಿ ಕುಮಾರಸ್ವಾಮಿ ನೋವು ತಿಂದಿದ್ದಾರೆ. ಅವರು ಎಷ್ಟು ಕಷ್ಟ ಪಟ್ಟಿದ್ದಾರೆ ಎಲ್ಲ ಗೊತ್ತಿದೆ ಎಂದರು.