ನವದೆಹಲಿ(ಫೆ.22): ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಬೀಕರ ದಾಳಿ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಭಾರತದಿಂದ ಪಾಕಿಸ್ತಾನಕ್ಕೆ ಹರಿಯುತ್ತಿದ್ದ ನೀರನ್ನು ನಿಬರ್ಂಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಲ್ಲದೆ, ಆ ನೀರಿನ ಹರಿವನ್ನು ಜಮ್ಮು-ಕಾಶ್ಮೀರ ಮತ್ತು ಪಂಜಾಬ್ ಕಡೆಗೆ ತಿರುಗಿಸಲು ಮೋದಿ ಸರ್ಕಾರ್ ನಿರ್ಧರಿಸಿರುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಪ್ರಧಾನಿ ಮೋದಿ ನೇತೃತ್ವದಲ್ಲಿ, ನಮ್ಮ ಸರ್ಕಾರ ಪಾಕಿಸ್ತಾನಕ್ಕೆ ನೀಡುತ್ತಿದ್ದ ನೀರಿನ ಪಾಲನ್ನು ತಡೆಯಲು ನಿರ್ಧರಿಸಿದೆ. ಪೂರ್ವ ಭಾಗದ ನದಿಗಳ ನೀರಿನ ಹರಿವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ ಕಡೆಗೆ ಹರಿಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ.

ಫೆ.14 ರಂದು ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಿಂದಾಗಿ ಸಿಆರ್‍ಪಿಎಫ್ ನ 40 ಸಿಬ್ಬಂದಿ ಮೃತಪಟ್ಟು ಹಲವು ಯೋಧರು ಗಾಯಗೊಂಡಿದ್ದರು. ಈ ಕೃತ್ಯವನ್ನು ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ಹೊತ್ತಿದೆ.