ಬೆಂಗಳೂರು(ಮಾ.27): ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ನಿರಾಕರಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ತಮ್ಮ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಬಿ ಫಾರಂ ನೀಡುವಂತೆ ಒತ್ತಾಯಿಸಿದ್ದಾರೆ.ಈಗಾಗಲೇ ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದು, ಕಾಂಗ್ರೆಸ್ ನಾಯಕರು ತಮ್ಮೊಂದಿಗೆ ಸಮಾಲೋಚನೆ ನಡೆಸದೇ ಟಿಕೆಟ್ ಘೋಷಣೆ ಮಾಡಿದ್ದಾರೆ ಎಂಬ ಅಸಮಾಧಾನವನ್ನು ಹೊರಹಾಕಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದೆ ಎಂಬ ಕಾರಣಕ್ಕಾಗಿ ವಿಧಾನಸಭೆ ಟಿಕೆಟ್ ನೀಡಲು ಮೀನಾಮೇಷ ಎಣಿಸಿದ ಕಾಂಗ್ರೆಸ್, ಈಗ ಲೋಕಸಭೆ ಚುನಾವಣೆ ಟಿಕೆಟ್ ನೀಡಿರುವುದು ಆಶ್ಚರ್ಯ ತಂದಿದೆ. ತಮಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ತಮ್ಮ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಬಿ ಫಾರಂ ಕೊಟ್ಟರೆ ಗೆಲ್ಲಿಸಿಕೊಂಡು ಬರುವುದಾಗಿ ಹೈಕಮಾಂಡ್‍ಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್ ನಾಯಕರು ಶಾಮನೂರು ಕುಟುಂಬದ ಜೊತೆ ಚರ್ಚೆ ನಡೆಸಿಯೇ ಟಿಕೆಟ್ ನೀಡಿರುವುದಾಗಿ ಹೇಳುತ್ತಿದ್ದಾರೆ. ಆದರೆ ಅಧಿಕೃತವಾಗಿ ಹೆಸರು ಘೋಷಣೆಯಾದ ನಂತರ ಶಾಮನೂರು ಅವರು ಹಿಂದೇಟಾಕಿದ್ದು, ರಾಷ್ಟ್ರ ರಾಜಕಾರಣದ ಬಗ್ಗೆ ನಿರಾಸಕ್ತಿ ತೋರಿಸುತ್ತಿದ್ದಾರೆ.

ಮಲ್ಲಿಕಾರ್ಜುನ್ ಅವರು ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಹೊಂದಿದ್ದು, ಸಚಿವರಾಗಬೇಕು ಎಂಬ ಆಸೆ ಇಟ್ಟುಕೊಂಡಿದ್ದಾರೆ. ತಮ್ಮ ತಂದೆ ಶಾಮನೂರು ಶಿವಶಂಕರಪ್ಪ ಅವರನ್ನು ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಿದರೆ ತೆರವಾಗುವ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಬಂದು ಸಚಿವರಾಗುವ ಇಂಗಿತ ಹೊಂದಿದ್ದು, ಅದಕ್ಕಾಗಿ ತಮ್ಮ ತಂದೆಯವರಿಗೆ ಲೋಕಸಭೆ ಟಿಕೆಟ್ ನೀಡುವಂತೆ ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.