ಶಿವಮೊಗ್ಗ(ಜು:10): ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ಶರಾವತಿ ನದಿ ನೀರು ಹರಿಸುವ ರಾಜ್ಯ ಸರ್ಕಾರದ ಪ್ರಸ್ತಾವಿತ ಯೋಜನೆ ವಿರೋಧಿಸಿ ಶರಾವತಿ ಉಳಿಸಿ ಹೋರಾಟ ಒಕ್ಕೂಟ ಬುಧವಾರ ಕರೆ ನೀಡಿದ್ದ ‘ಶಿವಮೊಗ್ಗ ಜಿಲ್ಲೆ ಬಂದ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಶಿವಮೊಗ್ಗ ನಗರದಲ್ಲಿ ಬಂದ್‌ಗೆ ವ್ಯಾಪಕ ಪ್ರತಿಕ್ರಿಯೆ ಕಂಡುಬಂದಿದ್ದು. ಬಸ್, ಆಟೋ, ಟ್ಯಾಕ್ಸಿಗಳ ಸಂಚಾರ ವಿರಳವಾಗಿದೆ. ಪ್ರಮುಖ ರಸ್ತೆಗಳಲ್ಲಿ ಅಂಗಡಿ-ಮುಂಗಟ್ಟುಗಳು ಬಾಗಿಲು ಮುಚ್ಚಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಶಿಕ್ಷಣ ಇಲಾಖೆಯು ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಿದೆ. ವಿವಿಧ ಸಂಘಟನೆಗಳು ನಗರದ ಹಲವೆಡೆ ಪ್ರತಿಭಟನೆ ನೆಡಸಿ, ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ.

ಶಿವಮೊಗ್ಗ ಜಿಲ್ಲೆಯ ಸಾಗರ, ಸೊರಬ, ಹೊಸನಗರ, ಶಿಕಾರಿಪುರ, ಶಿರಾಳಕೊಪ್ಪ, ಭದ್ರಾವತಿ, ತೀರ್ಥಹಳ್ಳಿ, ಜೋಗ, ಆನಂದಪುರಂ, ಹೊಳೆಹೊನ್ನೂರು, ಆಯನೂರು ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿದೆ.