ಬೆಂಗಳೂರು(ಮಾ.7): ಅಧಿಕಾರಕ್ಕೆ ಬಂದು 9 ತಿಂಗಳಾದರೂ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಅಧಿಕಾರಿಗಳು ಗೊರಕೆ ಹೊಡೆಯುತ್ತಿದ್ದರೆ ಸರ್ಕಾರ ನಿದ್ದೆ ಮಾಡುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಕೇವಲ ಬೊಗಳೆ ಬಿಡುವುದರಲ್ಲಿ ಕಾಲಹರಣ ಮಾಡುತ್ತಿದೆ. ಅಧಿಕಾರಕ್ಕೆ ಬಂದು 9 ತಿಂಗಳಾದರೂ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸದೆ ಬರಿ ಸಂಪುಟ ವಿಸ್ತರಣೆ, ಸೀಟು ಹಂಚಿಕೆ, ಖಾತೆ ಹಂಚಿಕೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಟೀಕಿಸುವ ನೈತಿಕತೆ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ 71 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ 2,19,000 ಕೋಟಿ ಅನುದಾನ ನೀಡಿದೆ. ರೈಲ್ವೆ, ರಾಷ್ಟ್ರೀಯ ಹೆದ್ದಾರಿ, ಕುಡಿಯುವ ನೀರು, ರಸ್ತೆಗಳ ನಿರ್ಮಾಣ, ಶೌಚಾಲಯ ಸೇರಿದಂತೆ ಪ್ರತಿಯೊಂದು ಯೋಜನೆಗಳಿಗೂ ಕೇಂದ್ರ ಹಣ ನೀಡಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಂತ್ಕಲ್ ಮೈನಿಂಗ್ ಪ್ರಕರಣದಲ್ಲಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದಿದ್ದಾರೆ. ವಿದೇಶಕ್ಕೆ ತೆರಳಬಾರದೆಂದು ನ್ಯಾಯಾಲಯ ಸೂಚಿಸಿದೆ. ಆದರೆ ನ್ಯಾಯಾಲಯದ ಆದೇಶಕ್ಕೂ ಬೆಲೆ ನೀಡದೆ ವಿದೇಶಕ್ಕೆ ಹೋಗಿಬಂದಿದ್ದಾರೆ ಎಂದು ವ್ಯಂಗ್ಯವಾಡಿದರು.

ಯಾವ ಕ್ಷೇತ್ರದಿಂದ ಟಿಕೆಟ್ ನೀಡಬೇಕು ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ರಾಜ್ಯ ನಾಯಕರು ನೀಡುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಯಾರೇ ಅಭ್ಯರ್ಥಿಯಾದರೂ ನಮ್ಮ ಪಕ್ಷದ ಗೆಲುವಿನ ಬಗ್ಗೆ ಸಂಶಯವಿಲ್ಲ. ನಾನು ಕೂಡ ಓರ್ವ ಆಕಾಂಕ್ಷಿಯಾಗಿದ್ದು, ಪಕ್ಷ ಮತ್ತೊಂದು ಬಾರಿ ಟಿಕೆಟ್ ನೀಡಿದರೆ ಸ್ಪರ್ಧೆಗೆ ಸಿದ್ದ ಎಂದು ಶೋಭಾ ತಿಳಿಸಿದ್ದಾರೆ.