ಬೆಂಗಳೂರು(ಆ:10): ರಾಜ್ಯದ 17 ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಈ ಪ್ರದೇಶದ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ತೀವ್ರ ಸ್ವರೂಪದ ನೆರೆ ಹಾವಳಿಗೆ ತುತ್ತಾಗಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ಮತ ಕ್ಷೇತ್ರದ ಜನತೆ ಕೂಡ ನೆರೆ ಕಾರಣಕ್ಕೆ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರು ಬಾದಾಮಿಗೆ ಭೇಟಿ ನೀಡದಿರುವುದು ಟೀಕೆಗೆ ಗುರಿಯಾಗಿತ್ತು.

ಇದಕ್ಕೆ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಮೂಲಕ ಉತ್ತರ ನೀಡಿದ್ದ ಸಿದ್ದರಾಮಯ್ಯ, ನೆರೆಸಂತ್ರಸ್ತರ ಕಷ್ಟದಲ್ಲಿ ಭಾಗಿಯಾಗಲು ಮನಸ್ಸು ತುಡಿಯುತ್ತಿದ್ದರೂ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಕಾರಣಕ್ಕೆ ವೈದ್ಯರ ಸೂಚನೆಯಂತೆ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಹೇಳಿದ್ದರು. ಆದರೆ ಸಿದ್ದರಾಮಯ್ಯನವರು ಶನಿವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಶುಕ್ರವಾರ ಸಂಜೆಯೇ ನವದೆಹಲಿಗೆ ತೆರಳಿದ್ದಾರೆ. ಈ ವಿಚಾರ ಈಗ ತೀವ್ರ ಚರ್ಚೆಗೆ ಕಾರಣವಾಗಿದೆ.