ಬೆಂಗಳೂರು(ಏ.04): ಮಂಡ್ಯ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಾಗಿದ್ದು, ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿ ಕಾಂಗ್ರೆಸ್ ಪಕ್ಷದ ಮರ್ಯಾದೆ, ಗೌರವ ಕಾಪಾಡಬೇಕು ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಸ್ಥಳೀಯ ಕಾಂಗ್ರೆಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಮಂಡ್ಯ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಾಗಿದೆ.

ಮಂಡ್ಯ ಹಾಗೂ ತುಮಕೂರು ಸೇರಿದಂತೆ ರಾಜ್ಯದ ಕೆಲ ಲೋಕಸಭಾ ಕ್ಷೇತ್ರಗಳು ಕಾಂಗ್ರೆಸ್ ಕೈ ತಪ್ಪಿದ್ದಕ್ಕೆ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಪ್ರಚಾರ ನಡೆಸುತ್ತಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ.

ಹೈಕಮಾಂಡ್ ಸೂಚನೆ ಮೇರೆಗೆ ಸಭೆ ನಡೆಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಮಾಜಿ ಶಾಸಕ ಚೆಲುವರಾಯಸ್ವಾಮಿ, ಅರವಿಂದ ಸಾಗರ್ ಮತ್ತು ಬಂಡಿ ಸಿದ್ದೇಗೌಡ ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.