ಬೆಂಗಳೂರು(ಜೂ:18): ಡಿ.ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ನೇಮಿಸಬೇಕೆಂಬ ಕಾಂಗ್ರೆಸ್ ಹಿರಿಯ ನಾಯಕರ ಲಾಬಿಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ಡಿ.ಕೆ ಶಿವಕುಮಾರ್ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಅವರಿಗೆ ವಹಿಸಿದ ಜವಾಬ್ದಾರಿಗಳನ್ನು ಚಾಚೂ ತಪ್ಪದೆ ಮುಗಿಸಿಕೊಂಡು ಬಂದಿದ್ದಾರೆ. ಅವರು ಜವಾಬ್ದಾರಿ ವಹಿಸಿಕೊಂಡ ಉಪಚುನಾವಣೆಗಳಲ್ಲಿ ಕಠಿಣ ಸವಾಲುಗಳನ್ನು ಎದುರಿಸಿ ಕಾಂಗ್ರೆಸ್ ಅನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ, ಸರ್ಕಾರ ರಚನೆಯ ವೇಳೆಯಲ್ಲಿಯೂ ಅವರ ಪಾತ್ರ ಅತ್ಯಂತ ಮುಖ್ಯವಾದುದು ಎಂಬುದು ಕಾಂಗ್ರೆಸ್ ನ ಹಲವು ಹಿರಿಯ ನಾಯಕರ ಅಭಿಪ್ರಾಯವಾಗಿದೆ.

ಡಿ.ಕೆ.ಶಿವಕುಮಾರ್ ಅಧ್ಯಕ್ಷರಾದರೆ ಕಾಂಗ್ರೆಸ್‍ನಲ್ಲಿ ತಮ್ಮ ಪ್ರತಿಸ್ಪರ್ಧಿಗಳ ಗುಂಪು ಪ್ರಬಲಗೊಳ್ಳುತ್ತದೆ ಎಂಬ ಆತಂಕದಿಂದ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸುತ್ತಿದ್ದು, ಸದ್ಯಕ್ಕೆ ಯಾವುದೇ ಬದಲಾವಣೆ ಮಾಡುವುದು ಬೇಡ. ಸರ್ಕಾರ ಮತ್ತು ಪಕ್ಷ ಎರಡೂ ಹಂತದಲ್ಲೂ ಯಥಾಸ್ಥಿತಿಯೇ ಮುಂದುವರೆಯಲಿ. ಡಿಸೆಂಬರ್ ನಂತರ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಿ ಎಂದು ಸಿದ್ದರಾಮಯ್ಯ ಹೈಕಮಾಂಡ್‍ಗೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.