ಬೆಂಗಳೂರು(ಜು:04): ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಪ್ರಯತ್ನಿಸುತ್ತಿದ್ದಾರೆ ಎಂದು ಸುಳ್ಳು ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷಮೆ ಕೇಳಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಅವರು ದೇಶ ಕಟ್ಟುವ ಕೆಲಸದಲ್ಲಿ ನಿರತರಾಗಿದ್ದಾರೆ. ಅವರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಿಲ್ಲ. ಅಧಿಕಾರ ಕಳೆದುಕೊಂಡಿರುವ ಹಲವಾರು ಅಧಿಕಾರದಲ್ಲಿ ಇರುವುದನ್ನು ಸಹಿಸಲಾಗದವರೆ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಟಾಂಗ್ ನೀಡಿದರು.

ಮಂತ್ರಿಗಿರಿ ಸಿಗಲಿಲ್ಲ ಎಂಬ ಕಾರಣಕ್ಕೆ ಮೈತ್ರಿ ಪಕ್ಷದ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ. ಸಿದ್ದರಾಮಯ್ಯನವರು ರಾಜಕೀಯ ಕಾರಣಕ್ಕಾಗಿ ಟೀಕೆ ಮಾಡುತ್ತಿದ್ದಾರೆ. ಕೆಲವರಿಗೆ ಮೋದಿ ಅವರನ್ನು ಟೀಕಿಸದೆ ಇದ್ದರೆ ತಿಂದಿದ್ದು ಜೀರ್ಣವಾಗುವುದಿಲ್ಲ. ಆ ಸಾಲಿಗೆ ಸಿದ್ದರಾಮಯ್ಯ ಕೂಡ ಸೇರಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.