ನವದೆಹಲಿ(ಫೆ.15): ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಯೋಧರ ಮೇಲೆ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಭದ್ರತಾ ಪಡೆ ಸಭೆ ನಡೆಯಿತು.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಪಾಕ್ ಜತೆಗಿನ ಎಲ್ಲಾ ವ್ಯಾಪರ ಒಪ್ಪಂದಗಳು ಕಡಿತಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಈ ಸಭೆಯಲ್ಲಿ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಗುಪ್ತಚರ ದಳದ ಮುಖ್ಯಸ್ಥರು ಕೂಡ ಭಾಗವಹಿಸಿದ್ದರು. ಇಲ್ಲಿ ಹೇಗೆ ಉಗ್ರರನ್ನು ಸೆದೆ ಬಡೆಯಬೇಕು; ಅದಕ್ಕಾಗಿ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಇನ್ನು ಗುರುವಾರ(ಫೆ.14) ಮಧ್ಯಾಹ್ನ ಸಿಆರ್‍ಪಿಎಫ್ ಯೋಧರ ಮೇಲೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಅವಂತಿಪೊರ ಎಂಬಲ್ಲಿ ಉಗ್ರರು ಬಾಂಬ್ ದಾಳಿ ನಡೆಸಿದ್ಧಾರೆ. ಕೆಲಸದ ನಿಮಿತ್ತ ವಾಹನವೊಂದರಲ್ಲಿ ತೆರಳುತ್ತಿದ್ದ ಕರ್ತವ್ಯನಿರತ ಯೋಧರ ಮೇಲೆ ಆತ್ಮಾಹುತಿ ದಾಳಿಕೋರ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ದಿಢೀರ್ ಆಕ್ರಮಣ ನಡೆಸಿದೆ. ದಾಳಿಕೋರ ಆದಿಲ್ ಅಹ್ಮದ್ ದಾರ್ ಸ್ಫೋಟಕಗಳನ್ನು ತುಂಬಿದ್ದ ಕಾರನ್ನು ಸೇನೆ ವಾಹನಕ್ಕೆ ಡಿಕ್ಕಿ ಹೊಡೆಸಿದ ಪರಿಣಾಮ 44 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.