ಬೆಂಗಳೂರು(ಜ:18): ಕಾಂಗ್ರೆಸ್ ಶಾಸಕಾಂಗ ಸಭೆಗೂ ನಮಗೂ ಯಾವುದೇ ಸಂಬಂಧ ಇಲ್ಲ,ಯಾವ ಶಾಸಕರು ಎಲ್ಲಿ ಹೋಗಿದ್ದಾರೋ ಅವರನ್ನು ಕರೆತರುವುದು ಅವರವರ ಪಕ್ಷದ ಜವಾಬ್ದಾರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ಕರೆದಿರುವ ಕಾಂಗ್ರೆಸ್ ಶಾಸಕಾಂಗ ಸಭೆಗೂ ನಮಗೂ ಸಂಬಂಧವೇ ಇಲ್ಲ,ನಮ್ಮಲ್ಲಿನ 104 ಶಾಸಕರೆಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ಲೋಕಸಭಾ ಚುನಾವಣೆಯನ್ನು ಎದುರಿಸುತ್ತೇವೆ,ಇದಕ್ಕಾಗಿ ನಾವು ನಮ್ಮದೇ ಆದ ಕಾರ್ಯತಂತ್ರವನ್ನು ರೂಪಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಅವರ ಪಕ್ಷದ ಶಾಸಕರು ಹೊರಹೋಗಿದ್ದರೆ ನಾವೇನು ಮಾಡಬೇಕು,ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಗೊಂದಲಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ,ಅವರ ಹುಳುಕು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.