ಬೆಂಗಳೂರು:(ಫೆ27): ಪುಲ್ವಾಮ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕ್‍ನ ಉಗ್ರನೆಲೆಗಳನ್ನು ಧ್ವಂಸಗೊಳಿಸಿದ್ದು, ಇದರಿಂದ ದೇಶದಲ್ಲೆಡೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಹಾಗೆಯೇ ರಾಜ್ಯದಲ್ಲಿಯೂ ಕೂಡ ಹೈ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನೇಮಿಸಿ ಬಿಗಿ ಭದ್ರತೆಯನ್ನು ಮಾಡಲಾಗಿದೆ. ಇನ್ನು ಪ್ರಮುಖ ನಿಲ್ದಾಣಗಳಲ್ಲಿ ಅಂದರೆ ವಿಮಾನ ನಿಲ್ದಾಣ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಇನ್ನೂ ಪ್ರಮುಖ ಸ್ಥಳಗಳಲ್ಲಿ ಜನರ ತಪಾಸಣೆ ಹಾಗೂ ವಸ್ತು ತಪಾಸಣೆಯನ್ನು ನಡೆಸಲಾಗುತ್ತಿದೆ ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಉನ್ನತಮಟ್ಟದ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಕಾರವಾರದ ನೌಕಾ ನೆಲೆಯಲ್ಲಿಯೂ ಕೂಡ ಹೆಚ್ಚಿನ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ರಜೆ ಮೇರೆಗೆ ಊರಿಗೆ ತೆರಳಿದ ಯೋಧರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಹೇಳಲಾಗಿದೆ. ಭದ್ರತೆಯ ದೃಷ್ಟಿಯಿಂದ ಪ್ರಮುಖ ಸ್ಥಳಗಳಿಗೆ ಹೆಚ್ಚಿನ ರಕ್ಷಣಾ ಸಿಬ್ಬಂದಿಯನ್ನು ನೇಮಿಸಲಾಗಿದೆ.