ನವದೆಹಲಿ(ಆ:17): ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು.

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿ ಮಾಡಿ, ಸಚಿವ ಸಂಪುಟ ಪಟ್ಟಿಯನ್ನು ಅಂತಿಮಗೊಳಿಸುತ್ತೇನೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಕ್ಕೆ ಕಳುಹಿಸಿದ್ದರು. ಅವರು ರಾಜ್ಯದ ನೆರೆ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ನಿನ್ನೆ ಪ್ರಧಾನಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲೇ ಕೇಂದ್ರದ ತಂಡವನ್ನು ರಾಜ್ಯಕ್ಕೆ ಕಳುಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದರು.